ತಿರುವನಂತಪುರಂ: ಕೇರಳ ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ಮಧ್ಯ ಕೇರಳದಲ್ಲಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪಥನಂತಿಟ್ಟ, ಕೋಟಾಯಂ ಹಾಗೂ ಇಡುಕ್ಕಿ ಜಿಲ್ಲೆಗಳಲ್ಲಿ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ. ವಿವಿಧ ಜಿಲ್ಲೆಗಳಲ್ಲಿ ಇದುವರೆಗೆ ಆರು ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಹಲವೆಡೆ ಭೂಕುಸಿತ, ಮಿಂಚಿನ ಅವಘಡ ಹಾಗೂ ಪ್ರವಾಹ ಸಂಭವಿಸಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಪಥನಂತಿಟ್ಟ ಜಿಲ್ಲೆಯ ರನ್ನಿ ಪ್ರದೇಶದಲ್ಲಿ ಪಂಬಾ, ಮಣಿಮಲ ಮತ್ತು ಅಚ್ಚನ್‌ಕೋವಿಲ್ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ಹಲವಾರು ಕುಟುಂಬಗಳನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ.
ಭಾರೀ ಮಳೆಯ ಹಿನ್ನೆಲೆಯಲ್ಲಿ ಮಹಾತ್ಮ ಗಾಂಧಿ ವಿಶ್ವವಿದ್ಯಾಲಯ ಮುಂದೂಡಿದ್ದ ಪರೀಕ್ಷೆಗಳ ಹೊಸ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ವಿಶ್ವವಿದ್ಯಾಲಯ ತಿಳಿಸಿದೆ.
ಪರಿಸ್ಥಿತಿಯನ್ನು ಪರಿಶೀಲಿಸಿದ ಮುಖ್ಯಮಂತ್ರಿ, ಪರಿಹಾರ ಕಾರ್ಯಗಳಿಗೆ ಸಚಿವರು ನೇತೃತ್ವ ವಹಿಸುವಂತೆ ಸೂಚನೆ ನೀಡಿದ್ದಾರೆ. ಸಾರ್ವಜನಿಕರು ಅಗತ್ಯವಿಲ್ಲದ ಪ್ರಯಾಣಗಳನ್ನು ತಪ್ಪಿಸುವಂತೆ ಮನವಿ ಮಾಡಿದ್ದಾರೆ.
