ಕೊಡ್ಲಿಪೇಟೆ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ: ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ


ಕೊಡ್ಲಿಪೇಟೆ: ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಶಾಲಾ ಹಾಗೂ ಕಾಲೇಜು ವಿಭಾಗಗಳ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಅಮೆರಿಕದಲ್ಲಿ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿರುವ ಕೊಡ್ಲಿಪೇಟೆ ಸಮೀಪದ ಮಾವಿನಹಳ್ಳಿ ಗ್ರಾಮದ ನಾಗೇಶ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿದರು.

ನಂತರ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಾಗೇಶ್ ಅವರು, ವಿದ್ಯಾರ್ಥಿಗಳ ಜೀವನದಲ್ಲಿ ವಿದ್ಯಾಭ್ಯಾಸದ ಮಹತ್ವವನ್ನು ವಿವರಿಸಿದರು. ಇದರೊಂದಿಗೆ ಸ್ಥಳೀಯ ಭಾಷೆ ಹಾಗೂ ಸಂಸ್ಕೃತಿಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು. ಕೊಡವ ಭಾಷೆಯನ್ನು ಕಲಿತು ಮಾತನಾಡುವ ಮೂಲಕ ಸ್ಥಳೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯಕ್ಕೆ ಯುವಜನತೆ ಮುಂದಾಗಬೇಕು ಎಂದು ಕರೆ ನೀಡಿದರು.

ಸ್ಥಳೀಯ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಮಾಜಿ ಸೈನಿಕರ ಕೊಡುಗೆಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಅವರ ಭಾವಚಿತ್ರಗಳನ್ನು ವಿದ್ಯಾಸಂಸ್ಥೆಯಲ್ಲಿ ಅಳವಡಿಸಲು ನಾಗೇಶ್ ಅವರು ಸಂಸ್ಥೆಗೆ ₹50 ಸಾವಿರ ದೇಣಿಗೆ ನೀಡಿದರು.

ಇದೇ ಸಂದರ್ಭದಲ್ಲಿ ಅವರ ಸಹೋದರಿ ಮಂಗಳಗೌರಿ ಅವರು ತಮ್ಮ ತಂದೆ ಸಿದ್ದಬಸಪ್ಪ ಅವರ ಹೆಸರಿನಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಿಸಿದರು. ಕೊಡ್ಲಿಪೇಟೆ ಸರ್ಕಾರಿ ಜಿ.ಎಂ.ಪಿ. ಶಾಲೆಯ 7ನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ತಲಾ ₹1,000 ಹಾಗೂ ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಮತ್ತು ಪದವಿ ಕಾಲೇಜಿನ ಕಲಾ ಹಾಗೂ ವಾಣಿಜ್ಯ ವಿಭಾಗಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ತಲಾ ₹2,000 ನಗದು ಪ್ರೋತ್ಸಾಹಧನದೊಂದಿಗೆ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.

ಕಳೆದ ಐದು ವರ್ಷಗಳಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್‌ಗಳ ಜೊತೆಗೆ ಪ್ರೋತ್ಸಾಹಧನ ನೀಡುತ್ತಾ ಬರುತ್ತಿರುವ ಶಿವರಳ್ಳಿ ಗ್ರಾಮದ ನಿವಾಸಿ, ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿರುವ ಅನಿತಾ ಅವರ ತಾಯಿ ಶ್ರೀಮತಿ ಗಂಗಮ್ಮ ಅವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಆಡಳಿತಾಧಿಕಾರಿ ಹಾಗೂ ನಿವೃತ್ತ ಶಿಕ್ಷಕ ಅಬ್ದುಲ್ ರಬ್ ಎಂ.ಎಸ್. ಅವರು ಮುಖ್ಯ ಅತಿಥಿಗಳನ್ನು ಪರಿಚಯಿಸಿ ಮಾತನಾಡಿ, ದೇಶದ ಐಕ್ಯತೆ, ಅಖಂಡತೆ ಹಾಗೂ ರಾಷ್ಟ್ರದ ಪ್ರಗತಿಗಾಗಿ ಪ್ರತಿಯೊಬ್ಬ ನಾಗರಿಕನೂ ತನ್ನ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹಲಸಿನಮರ ಶ್ರೀಮತಿ ಗೌರಮ್ಮ ಶಾಂತಮಲ್ಲಪ್ಪ, ಪದವಿ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಅಭಿಲಾಷ್, ಉಪನ್ಯಾಸಕ ಯೋಗೇಂದ್ರ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸೋಮಶೇಖರ್ ಸೇರಿದಂತೆ ಶಿಕ್ಷಕರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

×

WhatsApp Channel

ಕ್ಷಣ ಕ್ಷಣದ ಸುದ್ದಿಗಾಗಿ ನಮ್ಮ ವಾಟ್ಸಪ್ ಚಾನೆಲ್ ಸೇರಿ.

JOIN NOW