ರಾಜ್ಯಮಟ್ಟದಲ್ಲಿ ಮಿಂಚಿದ ಕೊಡ್ಲಿಪೇಟೆ ಪ್ರತಿಭೆ; ಶಾರ್ವರಿಗೆ ದ್ವಿತೀಯ ಸ್ಥಾನ, ವಿಧಾನಸೌಧದಲ್ಲಿ ಗೌರವ


ಕೊಡ್ಲಿಪೇಟೆ: ರಾಷ್ಟ್ರೀಯ ಶಿಕ್ಷಣ ದಿನದ ಅಂಗವಾಗಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಕೊಡ್ಲಿಪೇಟೆ ಹೋಬಳಿಯ ಕ್ಯಾತೆ ಗ್ರಾಮದ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ಶಾರ್ವರಿ ದ್ವಿತೀಯ ಸ್ಥಾನ ಪಡೆದು ಶಾಲೆ ಹಾಗೂ ಹೋಬಳಿಗೆ ಕೀರ್ತಿ ತಂದಿದ್ದಾಳೆ.

ದೇಶದ ಮೊದಲ ಶಿಕ್ಷಣ ಸಚಿವರಾದ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮದಿನದ ಸ್ಮರಣಾರ್ಥ ಪ್ರತಿವರ್ಷ ನವೆಂಬರ್ 11ರಂದು ರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸಲಾಗುತ್ತದೆ. ಇದರ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ನವೆಂಬರ್ 9ರಂದು ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಭೂವನಹಳ್ಳಿಯ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ರಾಜ್ಯಮಟ್ಟದ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

ಈ ಸ್ಪರ್ಧೆಯಲ್ಲಿ ಶಾರ್ವರಿ ಅತ್ಯುತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನ ಗಳಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾಳೆ. ಸಾಧನೆಗೈದ ವಿದ್ಯಾರ್ಥಿನಿ ಹಾಗೂ ಅವರಿಗೆ ಮಾರ್ಗದರ್ಶನ ನೀಡಿದ ಶಿಕ್ಷಕರನ್ನು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಗೌರವಿಸಲಾಯಿತು.

ಗ್ರಾಮೀಣ ಭಾಗದ ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲೆಯ ಮುಖ್ಯಸ್ಥರು, ಶಿಕ್ಷಕರು, ಪೋಷಕರು ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

×

WhatsApp Channel

ಕ್ಷಣ ಕ್ಷಣದ ಸುದ್ದಿಗಾಗಿ ನಮ್ಮ ವಾಟ್ಸಪ್ ಚಾನೆಲ್ ಸೇರಿ.

JOIN NOW